ಸಕಲ ಪೊಲೀಸ್ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕನ್ನಡದ ಶ್ರೇಷ್ಠ ಸಾಹಿತಿ, ನಾಟಕಕಾರ ಪ್ರೊ. ಚಂದ್ರಶೇಖರ ಪಾಟೀಲ್ ಅವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರರಿಗೆ ಅವರು ಈ ವಿಷಯ ತಿಳಿಸಿದರು.‘ಚಂಪಾ’ ಎಂದೇ ಪ್ರಸಿದ್ಧರಾದ ಇವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಸ್ವತಂತ್ರ ಚಿಂತನೆಯ ಲೇಖನದಲ್ಲಿ ಮೊನಚು ಇರುತ್ತಿತ್ತು. ವಿಷಯವನ್ನು ಪ್ರತಿಪಾದಿಸುವ ರೀತಿ ಮತ್ತು ಪ್ರಸ್ತುತ ವಿಷಯಗಳ ಬಗ್ಗೆ ವಿಮರ್ಶಿಸಿ ವ್ಯವಸ್ಥೆಗೆ ಕನ್ನಡಿ ಹಿಡಿಯುವಂತಹ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಚಂಪಾ ರವರು ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಚಂಪಾರವರು ತಮ್ಮ ಕುಟುಂಬಕ್ಕೆ ಅದರಲ್ಲಿಯೂ ತಮ್ಮ ತಂದೆಯವರಿಗೆ ಬಹಳ ಆತ್ಮೀಯರಾಗಿದ್ದರು. ತಮಗೆ ಮಾರ್ಗದರ್ಶಕರಾಗಿದ್ದ ಚಂಪಾ ರವರು ಇಂದು ನಮ್ಮನ್ನು ಅಗಲಿರುವುದು ಸಾಹಿತ್ಯ ಲೋಕಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು. ಸಕಲ ಪೊಲೀಸ್ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.

Discover more from Valmiki Mithra

Subscribe now to keep reading and get access to the full archive.

Continue reading