ಮುಂದಿನ ಬುಧವಾರ ಪ್ರತಿಪಕ್ಷದ ನಾಯಕರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೀಸಲಾತಿ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಸಮಯಾವಕಾಶ ನೀಡಿ ಸಹಕರಿಸಬೇಕೆಂದು ಪ್ರತಿಪಕ್ಷದ ಸದಸ್ಯರಿಗೆ ಸಚಿವ ಮಾಧುಸ್ವಾಮಿ ಮನವಿ ಮಾಡಿದರು.
ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಒದಗಿಸಬೇಕು ಹಾಗೂ ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಂದಿನ ಬುಧವಾರ ಸಭೆ ನಡೆಸಿ ನಿರ್ಧಾರ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.
ಮೀಸಲಾತಿಗಾಗಿ ಆಗ್ರಹಿಸಿ ಗುರುವಾರ ಧರಣಿ ಆರಂಭಿಸಿದ್ದ ಕಾಂಗ್ರೆಸ್ ಶಾಸಕರು, ಇಂದು (ಶುಕ್ರವಾರ) ಕೂಡ ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ಆರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮುಂದಿನ ಬುಧವಾರ ಪ್ರತಿಪಕ್ಷದ ನಾಯಕರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೀಸಲಾತಿ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಸಮಯಾವಕಾಶ ನೀಡಿ ಸಹಕರಿಸಬೇಕು. ಧರಣಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ನಿಮ್ಮ ಬೇಡಿಕೆ ಬಗ್ಗೆ ಸರ್ಕಾರ ಇಷ್ಟು ಸಕಾರಾತ್ಮಕವಾಗಿ ಸ್ಪಂದಿಸಿದೆ. ನೀವು ಸದನ ನಡೆಸಲು ಸಹಕಾರ ನೀಡಬೇಕು ಎಂದು ಕೋರಿದರು. ಇದರಿಂದ ತೃಪ್ತರಾದ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನಗಳಿಗೆ ವಾಪಸ್ ಆದರು. ನಂತರ ಸ್ಪೀಕರ್ ಪ್ರಶ್ನೋತ್ತರ ಕಲಾಪ ಆರಂಭಿಸಿದರು