ದಾವಣಗೆರೆ : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ.
ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ ಇದ್ದಾರೆ ಎಂದು ಆರೋಪ ಇದೆ ಎಂದು ಯಾರು ಹೇಳಿದ್ದಾರೆ ಅವರನ್ನೇ ಗೋಕಾಕಿಗೆ ಹೋಗಿ ನೇರವಾಗಿ ಕೇಳಿ. ಯಾರ ಬಳಿ ಬಾಂಬ್ ಇರುತ್ತದೆಯೋ ಅವರು ಬ್ಲಾಸ್ಟ್ ಮಾಡಬೇಕಾಗುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಬಿಜೆಪಿ ಅಧಿಕಾರವಧಿಯಲ್ಲಿ ಭ್ರಷ್ಟಾಚಾರವಿದೆ. ಸ್ವಾಮೀಜಿಯವರೇ ಮಠದ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಬಿಡುಗಡೆ ಮಾಡಿಸಲು ಶೇ. 30 ಕಮಿಷನ್ ನೀಡಬೇಕು ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಇದೆ ಎಂಬುದು ಬಹಿರಂಗವಾಗುತ್ತಿದೆ ಎಂದು ದೂರಿದರು.
ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ಬಗ್ಗೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ದುರ್ಘಟನೆ ನಡೆಯಬಾರದಿತ್ತು. ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆಗಳು ತಪ್ಪುತ್ತವೆ ಎಂದು ಸತೀಶ್ ಜಾರಕಿಹೊಳಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.