ಬೆಂಗಳೂರು: ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಂಜಯ ನಗರದಲ್ಲಿ ನಡೆದಿದೆ. ಮೃತ ದುರ್ದೈವಿ ಯುವಕನನ್ನು ಕಿಶೋರ್ ಎಂದು ಗುರುತಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದು, ಕುಟುಂಬಸ್ಥರು ಬೆಸ್ಕಾಂ ವಿರುದ್ಧ ಕಿಡಿಕಾರಿದ್ದಾರೆ.
ಈ ಸಾವಿಗೆ ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕಿಶೋರ್ ಬಲಿಯಾಗಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಮೃತದೇಹವನ್ನ ಬೆಸ್ಕಾಂ ಆವರಣದಲ್ಲಿ ಇಟ್ಟು ಕುಟುಂಬ ನ್ಯಾಯ ಕೇಳಿದೆ. ನಮಗೆ ಅನ್ಯಾಯವಾಗಿದೆ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.
ಕಿಶೋರ್ ಮೂಲತ: ಹೊಸಕೋಟೆ ಮೂಲದವನಾಗಿದ್ದು, ತಂಗಿ ಹಾಗೂ ಬಾವನ ಜೊತೆ ಗೆದ್ದಲಹಳ್ಳಿಯಲ್ಲಿ ವಾಸವಾಗಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಕೇವಲ 3 ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದ. ನಿನ್ನೆ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ದುರಂತ ಸಂಭವಿಸಿದೆ. ಘಟನೆ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.