ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ ದಲಿತ, ದಕ್ಷ ಅಧಿಕಾರಿ ರವೀಂದ್ರನಾಥ್ ಅವರ ರಾಜೀನಾಮೆಯನ್ನು ರಾಜ್ಯ ಸರಕಾರ ಅಂಗೀಕಾರ ಮಾಡಬಾರದು -ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು:  ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರ ರಾಜೀನಾಮೆಯನ್ನು ರಾಜ್ಯ ಸರಕಾರ ಅಂಗೀಕಾರ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ ದಲಿತ, ದಕ್ಷ ಅಧಿಕಾರಿ ರವೀಂದ್ರನಾಥ್ ಅವರು ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ತಿಮಿಂಗಿಲಗಳಿಗೆ ಬಲೆ ಹಾಕಿದ್ದರು. ಹೀಗೆ, ಸರಕಾರ ಮತ್ತು ಸಮಾಜಕ್ಕೆ ವಂಚನೆ ಮಾಡಿದ್ದವರ ಜಾತಕ ಬಿಚ್ಚಿಡಲು ಅವರು ಪ್ರಯತ್ನ ಮಾಡುತ್ತಿದ್ದರು. ಗಣ್ಯ ವ್ಯಕ್ತಿ, ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕತೆಯ ಪೋಸು ಕೊಟ್ಟು ನಕಲಿ ಜಾತಿ ಪ್ರಮಾಣ ಪತ್ರದ ಮೂಲಕ ಹುದ್ದೆ ಗಿಟ್ಟಿಸಿರುವ ಆರೋಪ ಎದುರಿಸುತ್ತಿರುವ ನಿವೃತ್ತ ಅಧಿಕಾರಿಗೆ ನೋಟಿಸ್ ನೀಡಿದ ಹತ್ತೇ ದಿನದಲ್ಲಿ ನೋಟಿಸ್ ಕೊಟ್ಟ ಹಿರಿಯ ಅಧಿಕಾರಿಯನ್ನೇ ಎತ್ತಂಗಡಿ ಮಾಡಲಾಗಿದೆ!

ಸರಕಾರ ಯಾರ ಬಾಲಂಗೋಚಿ ಎನ್ನುವುದು ವರ್ಗಾವಣೆ ಒಂದರಿಂದಲೇ ಅರ್ಥವಾಗುತ್ತದೆ. ಏಕೆಂದರೆ, ಆರೋಪಿತ ನಿವೃತ್ತ ಅಧಿಕಾರಿ ಕಾಂಗ್ರೆಸ್ ಸರಕಾರದಲ್ಲಿ ಗೃಹ ಇಲಾಖೆ ಸಲಹೆಗಾರರಾಗಿದ್ದರು. 5 ವರ್ಷ ರಾಜ್ಯವನ್ನಾಳಿದ ಮುಖ್ಯಮಂತ್ರಿಗೆ ಆಪ್ತರೂ ಆಗಿದ್ದರು. ಅವರಿಗೆ ನೋಟಿಸ್ ನೀಡಿದಾಕ್ಷಣ ಡಾ.ರವೀಂದ್ರನಾಥ್ರನ್ನು ವರ್ಗಾವಣೆ ಮಾಡಲಾಗಿದೆ. ಹಾಗಾದರೆ, ಬಿಜೆಪಿ & ಕಾಂಗ್ರೆಸ್ ನಡುವೆ ಇರುವ ಒಳ ಒಪ್ಪಂದವೇನು? ಒಬ್ಬ ದಲಿತ ಅಧಿಕಾರಿಯನ್ನು ಬಲಿ ಹಾಕಲು ಎರಡೂ ರಾಷ್ಟ್ರೀಯ ಪಕ್ಷಗಳು ನಡೆಸಿದ ಷಡ್ಯಂತ್ರ ಇದು ಎಂಬುದು ನನ್ನ ನೇರ ಆರೋಪ ಮಾಡಿದರು.

Discover more from Valmiki Mithra

Subscribe now to keep reading and get access to the full archive.

Continue reading