ಬೆಂಗಳೂರು: ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ ಎಂದು ಹೇಳಿದರು. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಹಾಗಾಗಿ ಅದಿಕಾರಿಗಳು ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಸಲಹೆ ಮಾಡಿದರು.
ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂ.ಗೆ ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಾತನಾಡಿ, ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಹಾಗೆಯೆ ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ರಾಜ್ಯ ಸರ್ಕಾರದಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ 30 ನೌಕರರಿಗೆ ತಲಾ 50ಸಾವಿರ ರೂ. ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.