ಬೆಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿ ಬಳಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳಿಗೆ ಮಾಹಿತಿ ಒದಗಿಸಲು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಅವರ ಜೊತೆ ಸಮನ್ವಯ ಸಾಧಿಸಬೇಕು. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಚ್ಚರಿಕೆ ಹೆಜ್ಜೆ ಇಡಬೇಕೆಂದು ಸೂದ್ ಅವರಿಗೆ ಸಿಎಂ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಪ್ರತಿಕ್ಷಣದ ಮಾಹಿತಿಯನ್ನು ತಮಗೆ ಒದಗಿಸಬೇಕು. ತನಿಖಾ ಪ್ರಗತಿ ವರದಿ ಯಾವ ಹಂತದಲ್ಲಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರನ ಹಿನ್ನಲೆ, ಈತನ ಹಿಂದೆ ಯಾರಾದರೂ ಉಗ್ರರು ಇದ್ದಾರೆಯೇ? ಯಾವ ಸಂಘಟನೆಗೆ ಸೇರಿದವರು, ಇವರ ಉದ್ದೇಶ ಎಂಬುದರ ಬಗ್ಗೆ ಇಂಚಿಂಚು ಮಾಹಿತಿ ನೀಡಬೇಕೆಂದು ಸೂಚನೆ ನೀಡಿದ್ದಾರೆ.
ಈಗಾಗಲೇ ಮಂಗಳೂರುನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‍ಕುಮಾರ್ ಹಾಗೂ ಶಿವಮೊಗ್ಗ ಮತ್ತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದಲೂ ನಾವು ಮಾಹಿತಿ ಪಡೆದಿದ್ದೇವೆ ಎಂದರು