ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗ ಪಡಿಸಿಕೊಂಡು ತಮ್ಮ ಸ್ನೇಹಿತ ಎಲ್.ವಿವೇಕಾನಂದ ಅವರಿಗೆ ಬೆಂಗಳೂರು ಟರ್ಫ್‍ಕ್ಲಬ್‍ನ ಸ್ಟಿವರ್ಡ್ ಮತ್ತು ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ನೇಮಕ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ನೀಡಲಾಗಿದ್ದ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಗಳ ಸಹಿತ ಜ.10ರೊಳಗೆ ಹಾಜರಾಗಬೇಕೆಂದು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಲೋಕಾಯುಕ್ತ ಎಸ್‍ಪಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ತಿಳಿಸಿದ್ದು, ಈ ಸಂಬಂಧ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿರುವುದು ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಸಿಕ್ಕ ಆರಂಭಿಕ ಜಯ ಎಂದು ತಿಳಿಸಿದ್ದಾರೆ.